ಮಂಡ್ಯ :- ಕೆ ಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸದೆ ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಕಾವೇರಿ ನೀರಾವರಿ ನಿಗಮ ಕಚೇರಿಗೆ ನುಗ್ಗಲು ಯತ್ನಿಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ನಿಗಮದ ಕಚೇರಿ ತೆರಳಿದ ಪಕ್ಷದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದರು,ಪೊಲೀಸರು ಗೇಟ್ ಮುಚ್ಚಿ ಕಾರ್ಯಕರ್ತರನ್ನು ತಡೆದಿದ್ದರಿಂದ ಕೆಲಕಾಲ ಧರಣಿ ನಡೆಸಿದರು.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಮಾತನಾಡಿ ಕಳೆದ ವರ್ಷ ಬರಗಾಲದಿಂದ ನೀರಿಲ್ಲದೆ ಎರಡು ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ, ಇದ್ದ ನೀರು ತಮಿಳುನಾಡು ಪಾಲಾಯಿತು, ಇದೀಗ ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ವಿ ಸಿ ನಾಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ನಾಲೆಗಳಿಗೆ ನೀರುಹರಿಸಲು ಸರ್ಕಾರ ಕಾಮಗಾರಿಯ ನೆಪ ಹೇಳುತ್ತಿದೆ ಎಂದರು.
ರಾಜ್ಯದಲ್ಲಿ 824 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದರ ಸಂಖ್ಯೆಯನ್ನು ಹೆಚ್ಚು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ, ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ರೈತರ ಬಗ್ಗೆ ಕಾಳಜಿ ತೋರದೆ ಸಹೋದರ ಅಥವಾ ಮಗಳನ್ನು ಶಾಸಕರನ್ನಾಗಿ ಮಾಡಲು ರಾಜಕಾರಣದಲ್ಲಿ ನಿರತರಾಗಿದ್ದಾರೆ, ನಾಲೆಗಳಿಗೆ ನೀರು ಹರಿಸುವ ಮೂಲಕ ಗಂಡಸುತನ ತೋರಲಿ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಮಾನ ಮರ್ಯಾದೆ ಇಲ್ಲದಾಗಿದೆ, ನಾಲೆಗಳಿಗೆ ನೀರು ಬಿಡುವ ಬಗ್ಗೆ ಚಿಂತಿಸುತ್ತಿಲ್ಲ ಯಾರು ಸಹ ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ಮುಂದಾಗುತ್ತಿಲ್ಲ ಎಂದು ಹೇಳಿದರು.
ನಾಲಾ ಕಾಮಗಾರಿ ಸ್ಥಗಿತಗೊಳಿಸಿ ತಕ್ಷಣ ನಾಲೆಗಳಿಗೆ ನೀರು ಹರಿಸಬೇಕು, ಯಾವ ದಿನ ನೀರು ಹರಿಸಲಾಗುವುದು ಎಂಬುದನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು.
ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಶ್ವನಾಥ್ ಎಂ ಸ್ಥಳಕ್ಕೆ ಭೇಟಿ ನೀಡಿ ಸದ್ಯಕ್ಕೆ ಕೃಷ್ಣರಾಜಸಾಗರಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ, ಜಲಾಶಯದಲ್ಲಿ 92.80 ನೀರು ಸಂಗ್ರಹವಾಗಿದೆ, ನಾಲಾ ಅಭಿವೃದ್ಧಿ ಕಾಮಗಾರಿ 28 ಕಿ.ಮೀ ಮುಗಿದಿದ್ದು, 12 ಕಿ.ಮೀ ಬಾಕಿ ಇದೆ, ಜುಲೈ ಮೊದಲ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದ್ದು ಅಲ್ಲಿ ಚರ್ಚಿಸಿ ನಾಲೆಗಳಿಗೆ ನೀರು ಬಿಡುವ ತೀರ್ಮಾನ ಕೈಗೊಳ್ಳಲಾಗುವುದು, ಜಲಾಶಯದಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣದ ಅನುಸಾರ ನಾಲೆಗೆ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು.