ಮಂಡ್ಯ :- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಎಸ್ ಸಿ ಎಸ್ ಪಿ ಹಾಗೂ ಟಿ ಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಡ್ಯದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಮೆರವಣಿಗೆ ನಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಕಪ್ಪು ಬಾವುಟ ಹಿಡಿದು ಮೆರವಣಿಗೆ ಹೊರಟ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪರಿಶಿಷ್ಟರ ಮೀಸಲು ಎಸ್ ಸಿ ಎಸ್ ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ 25.282ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಲ್ಲದೆ ರಾಜ್ಯ ಸರ್ಕಾರ 105.469 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ, ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ,ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಉಪಯೋಜನಾ ಕಾಯ್ದೆಯಡಿ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ್ದ ಅನುದಾನ ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಕಲಂ 7 (ಸಿ ) (ಡಿ ) ಸೇರಿಸಲಾಗಿದೆ, ಇದೊಂದು ನಯ ವಂಚನೆ ಕ್ರಮವಾಗಿದ್ದು,ಇಂತಹ ಅನ್ಯಾಯ ತಡೆಯಲು ವಿಫಲವಾಗಿರುವ ಸಮುದಾಯದ ಸಚಿವರು,ಶಾಸಕರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಗ್ಯಾರಂಟಿ ಯೋಜನೆಗೆ ಪಡೆದಿರುವ 25,282 ಕೋಟಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ಮತ್ತು ಕಳೆದ ಹತ್ತು ವರ್ಷದಲ್ಲಿ ಆಳುವ ಸರ್ಕಾರಗಳು ವಾಪಸ್ ಪಡೆದಿರುವ 80.000 ಕೋಟಿ ಹಣವನ್ನು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ಹಂಚಿಕೆ ಮಾಡಬೇಕು, ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಅನುದಾನ ಸದ್ಬಳಕೆ ಮಾಡದೆ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿ ಮತ್ತು ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿ ನಾಟಕ ನಿಲ್ಲಿಸಿ ಹೊರಗುತ್ತಿಗೆ ಪದ್ಧತಿ ರದ್ದು ಮಾಡಿ ಸರ್ಕಾರಿ ಸೇವಾ ನೇಮಕಾತಿಯಂತೆ ನೇಮಕ ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಸಮುದಾಯದ ಜನತೆ ಬೌದ್ಧ ಧರ್ಮ ಸ್ವೀಕರಿಸಿದ್ದು ಇವರ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಾಗಿ ಮಂಡ್ಯ ನಗರ ಅಭಿವೃದ್ಧಿ ಪ್ರಾಧಿಕಾರ ಬೌದ್ಧ ವಿಹಾರ ನಿರ್ಮಾಣಕ್ಕೆ ಶುಲ್ಕ ವಿನಾಯಿತಿಯಲ್ಲಿ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ನೂತನವಾಗಿ ಜಾರಿಗೊಳಿಸಿರುವ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸಂರಕ್ಷಣಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆ ಕಾನೂನು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕು ಸಂರಕ್ಷಣೆಗೆ ಮಾರಕವಾಗಿರುವುದರಿಂದ ನೂತನ ಕಾನೂನುಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು,
ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾಧ್ಯಕ್ಷ ಬಿ ಆನಂದ್, ಮರಂಕಯ್ಯ, ಈಚಗೆರೆ ನಾಗರಾಜ್, ವೈ ಸುರೇಶ್ ಕುಮಾರ್, ಹೊನ್ನಯ್ಯ, ಎನ್ ಸಿ ರಾಜು, ಸುರೇಶ್ ಮರಳಗಾಲ, ಮಹದೇವ್ ಕೊತ್ತತ್ತಿ, ಭಾಗ್ಯಮ್ಮ,ಗೀತಾ,ಸುಕನ್ಯ, ಸರಳ ನೇತೃತ್ವ ವಹಿಸಿದ್ದರು.