ಮಂಡ್ಯ :- ಜಿಲ್ಲೆಯಲ್ಲಿ ಡಿ.20, 21, 22 ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಯಾವುದೇ ಲೋಪವಾಗದಂತೆ ಪಾರದರ್ಶಕವಾಗಿ ವೆಚ್ಚ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಸಭೆ ನಡೆಸಿ ಮಾತನಾಡಿ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಮ್ಮ ಸಮಿತಿಗೆ ಬಿಡುಗಡೆಯಾಗುವ ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಮಿತಿಯಲ್ಲಿ ಮಂಡಿಸಿ ಸಾಹಿತ್ಯ ಸಮ್ಮೇಳನದ ವಿಶೇಷಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದರು.
ಕ್ರಿಯಾ ಯೋಜನೆ ಐಟಂವಾರು ವಿಸ್ತೃತವಾಗಿರಬೇಕು. ಕ್ರಿಯಾಯೋಜನೆಗೆ ಸಂಬಂಧಿಸಿದಂತೆ ಕಾರ್ಯಾಕಾರಿ ಸಮಿತಿಯಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಕೆಲಸಗಳನ್ನು ಪ್ರಾರಂಭಿಸಬೇಕು. ಸಮಿತಿಯಿಂದ ಭರಿಸಲ್ಪಡುವ ವೆಚ್ಚಕ್ಕೆ ಸಂಬಂಧಿಸಿದ ದಾಖಲೆಗಳನ್ನು ಧೃಡೀಕರಣ ಪಡಿಸಿ ಹಣಕಾಸು ಸಮಿತಿಗೆ ಸಲ್ಲಿಸಬೇಕು ಎಂದರು
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ಗೌರವ ತಂದು ಕೊಡುವ ವಿಷಯವಾಗಿದೆ. ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಿ. ಜಿಲ್ಲೆಯ ಎಲ್ಲಾ ಸಾರ್ವಜನಿಕರ, ಸಂಘ ಸಂಸ್ಥೆಗಳ ವಿಶ್ವಾಸ ಪಡೆಯಲು ಮುಂದಾಗಿ ಎಂದು ಹೇಳಿದರು.
ಸಮ್ಮೇಳನಕ್ಕೆ ಸಂಬಂಧಿಸಿದಂತೆ ಈಗಾಗಲೇ 28 ಸಮಿತಿಗಳು ರಚನೆಯಾಗಿದ್ದು, ಪ್ರತಿ ಸಮಿತಿಗೆ ಸರ್ಕಾರಿ ಅಧಿಕಾರಿಗಳನ್ನು ಸದಸ್ಯ ಕಾರ್ಯದರ್ಶಿ ಹಾಗೂ ಸಂಚಾಲಕರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಸಮ್ಮೇಳನವು ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬವಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಸಣ್ಣ ಪುಟ್ಟ ತೊಂದರೆಗಳು ಬಾರದಂತೆ ಸರಿದೂಗಿಸಿಕೊಂಡು ಎಲ್ಲರ ಸಹಕಾರದಿಂದ ಸಮ್ಮೇಳನದ ಕೀರ್ತಿ ಎಲ್ಲೆಡೆ ಪಸರಿಸಬೇಕು ಎಂದರು
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಕಸಾಪ ಸಮ್ಮೇಳನದ ಸಂಚಾಲಕಿ ಡಾ ಮೀರಾ ಶಿವಲಿಂಗಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.