ಮಂಡ್ಯ :- ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೊರ್ಚಾ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಪತ್ರ ರವಾನಿಸಿದರು.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 1,000 ಕೋಟಿ ಅನುದಾನವನ್ನು ಡಿ.ದೇವರಾಜ ಅರಸು ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ, ಮರಾಠ,ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ ಮಾಚಿದೇವ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಬಿಡುಗಡೆ ಮಾಡಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ 1600 ಕೋಟಿ ರೂ ಘೋಷಣೆ ಮಾಡಿ ಕೇವಲ 57.04 ಕೋಟಿ ವೆಚ್ಚ ಮಾಡಿ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕೆ 6065 ಅರ್ಜಿಗಳು ಸಲ್ಲಿಕೆಯಾಗಿದ್ದರೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ, ಅತ್ಯಂತ ಹಿಂದುಳಿದ ಸಮುದಾಯ ಗಳಾದ ಹೂಗಾರ, ಕಂಬಾರ, ಗಾಣಿಗ, ಹಡಪದ, ಈಡಿಗ,ಮಾಳಿ ಸಮುದಾಯದ ನಿಗಮ ಗಳಿಗೂ ಸಹ ಹಣ ನೀಡಿಲ್ಲ ಎಂದು ಆರೋಪಿಸಿದರು.
ಹಿಂದುಳಿದ ವರ್ಗ ನಿಗಮಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ 1600 ಕೋಟಿ ರೂಗಳನ್ನು ಕೂಡಲೇ ಬಿಡುಗಡೆ ಮಾಡಿ ಹಿಂದುಳಿದವರ ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಮೊರ್ಚಾ ಜಿಲ್ಲಾಧ್ಯಕ್ಷ ನರಸಿಂಹಾಚಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್, ವಾಸು, ನರಸಿಂಹಮೂರ್ತಿ ಗೌಡ, ಸಿ ಟಿ ಮಂಜುನಾಥ್, ಸಿದ್ದರಾಜು ಗೌಡ, ಮಹಿಳಾಧ್ಯಕ್ಷ ಮಂಗಳ, ಮಲ್ಲಿಕಾರ್ಜುನ್, ಲಕ್ಷ್ಮಣಗೌಡ, ಧರಣಿ, ಕಲ್ಲಳ್ಳಿ ರಾಜು, ಪ್ರಸನ್ನ, ಚಂದ್ರು ನೇತೃತ್ವ ವಹಿಸಿದ್ದರು.