ಮದ್ದೂರು :- ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಹೆದ್ದಾರಿಯಲ್ಲಿ ಉರುಳಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬಳಿ ನಡೆದಿದೆ.
ಬೆಂಗಳೂರು – ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು ಮೂವರು ಪ್ರಯಾಣಿಕರ ತಲೆಗೆ ಪೆಟ್ಟು ಬಿದ್ದಿದ್ದು ಇತರ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಚಾಮರಾಜನಗರದಿಂದ ಕೊಳ್ಳೇಗಾಲ ಮಾರ್ಗವಾಗಿ ಬೆಂಗಳೂರಿಗೆ (KA 10 F 0520)ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಕ್ಷಣವೇಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ದಾಖಲು ಮಾಡಿದ್ದಾರೆ.
ಹೆದ್ದಾರಿಯಲ್ಲಿ ಬಸ್ ಉರುಳಿಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು,ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಗಾಯಗೊಂಡ ಪ್ರಯಾಣಿಕರು ಚಿಕಿತ್ಸೆ ಪಡೆಯುತ್ತಿರುವ ಮದ್ದೂರು ತಾಲೂಕು ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಅತಿ ಅವಶ್ಯಕತೆ ಇರುವಂತಹ ತುರ್ತು ಪರಿಸ್ಥಿತಿಯಲ್ಲಿರುವ ಪ್ರಯಾಣಿಕರನ್ನು ಅವಶ್ಯಕವಿದ್ದಲ್ಲಿ ಮಿಮ್ಸ್ ಗೆ ಹಾಗೂ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ಅದರ ಖರ್ಚು ವೆಚ್ಚವನ್ನು ಕೆ ಎಸ್ ಆರ್ ಟಿಸಿ ವತಿಯಿಂದ ಭರಿಸುವಂತೆ ನಿರ್ದೇಶನ ನೀಡಿದರು.
ಪರಿಸ್ಥಿತಿ ಅವಲೋಕಿಸಿದರೆ ಸಣ್ಣ ಪುಟ್ಟ ಗಾಯಗಳಾಗಿದ್ದು ಎರಡು-ಮೂರು ಜನರಿಗೆ ಹೆಚ್ಚು ಗಾಯಗೊಂಡಿದ್ದು, ಅವರನ್ನು ಮಿಮ್ಸ್ ಅಥವಾ ಚಿಕಿತ್ಸೆಗೆ ಉನ್ನತ ಆಸ್ಪತ್ರೆಗೆ ಪ್ರಥಮ ಆದ್ಯತೆ ಮೇಲೆ ಸ್ಥಳಾಂತರ ಗೊಳಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಕೆ.ಎಸ್.ಆರ್.ಟಿಸಿ ಜಿಲ್ಲಾ ನಿಯಂತ್ರಕ ನಾಗರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
.