ಮಂಡ್ಯ : ಪಾಕಿಸ್ತಾನದ ಉಗ್ರರ ನೆಲೆ ಗುರಿಯಾಗಿಸಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸಂಹಾರ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಏನಾದರೂ ಆಗಬಹುದು ಎಂಬ ಮುನ್ನೆಚ್ಚರಿಕೆಯಿಂದ ರಾಜ್ಯದ ಎಲ್ಲೆಡೆ ಅಲರ್ಟ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಅಣೆಕಟ್ಟೆಗಳು ಸೇರಿದಂತೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಭಾರತೀಯ ಸೇನೆ ಪಾಕಿಸ್ತಾನದಲ್ಲಿ ಉಗ್ರರನ್ನು ಸದೆ ಬಡಿದ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ, ರಾಜ್ಯದಲ್ಲಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ ಮೈಸೂರಿನಲ್ಲಿರುವ ಪಾಕಿಸ್ತಾನಿ ಪ್ರಜೆಗಳು ನ್ಯಾಯಾಲಯಕ್ಕೆ ಹೋಗಿದ್ದಾರೆ, ಮತ್ತೆಷ್ಟು ಮಂದಿ ಇದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದರು.
ರಾಜ್ಯದಲ್ಲಿ ಸ್ವ ರಕ್ಷಣಾ ತಾಲೀಮು ಎಲ್ಲೆಡೆ ನಡೆಯುತ್ತಿದೆ, ಕೇಂದ್ರ ಸರ್ಕಾರದ ಸೂಚನೆಯನ್ನು ಪಾಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ, ಶಾಸಕರಾದ ಪಿ ಎಂ ನರೇಂದ್ರಸ್ವಾಮಿ, ಕದಲೂರು ಉದಯ್, ರಮೇಶ್ ಬಾಬು ಬಂಡಿ ಸಿದ್ದೇಗೌಡ, ಮಧು ಜಿ ಮಾದೇಗೌಡ ಇತರರಿದ್ದರು.
ರಾಜ್ಯದ ಎಲ್ಲೆಡೆ ಅಲರ್ಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ
195

