ಮೈಸೂರು :-ಹಾಲಿ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆ ಮೇಲೆ ಪೆನ್‌ಡ್ರೈವ್ ಪ್ರಕರಣ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಮೈಸೂರು ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ, ಈ ಬಾರಿ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹೀಗಾಗಿಯೇ 6 ತಿಂಗಳ ಮುಂಚೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೆವು. ಮತದಾರರನ್ನು ಭೇಟಿಯಾಗಲು ಅವರಿಗೆ ಸಾಕಷ್ಟು ಸಮಯ ಸಿಕ್ಕಿದೆ ಎಂದರು
ಪೆನ್‌ಡ್ರೈವ್ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ದರು. ಯಾರು ಸರಿ, ಯಾರು ಸರಿ ಇಲ್ಲ ಎನ್ನುವುದನ್ನು ನಿರ್ಧರಿಸುತ್ತಾರೆ. 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವೈಫಲ್ಯಗಳೇನು, ನಮ್ಮ ಸರ್ಕಾರದ ಸಾಧನೆ ಏನು ಎಂಬುದನ್ನು ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಹೇಳಿದರು
ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ತಿಳಿಸಿದರು
ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡ ಇದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.